ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿ: ನಾಡೋಜ ಡಾ.ಮಹೇಶ ಜೋಶಿ
ಬೆಂಗಳೂರು: ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿಯವರು ಸಹಜವಾಗಿಯೇ ವಚನಪಿತಾಮಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿಯವರು ತಿಳಿಸಿದರು. ಅವರಿಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಫ.ಗು.ಹಳಕಟ್ಟಿಯವರ 144ನೆಯ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೆ ಮೊದಲು ಕವಿ ಚರಿತೆಕಾರರು ಗುರುತಿಸಿದ್ದು ಕೇವಲ 50 ವಚನಕಾರರನ್ನು ಮಾತ್ರ. ಫ. ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ 250 ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು. ಜೊತೆಗೆ ಹರಿಹರನ 42 ರಗಳೆಗಳನ್ನು ಸಂಶೋಧಿಸಿ ಪ್ರಕಟಿಸಿದ ಸಾಧನೆ ಹಳಕಟ್ಟಿಯವರಿಗೆ ಸಲ್ಲುತ್ತದೆ. ಹಳಕಟ್ಟಿಯವರು ಬಸವಣ್ಣನವರ ವಚನಗಳನ್ನು ಇಂಗ್ಲಿಷ್ ಗೆ ಅನುವಾದಿಸಿ ‘ಇಂಡಿಯನ್ ಆಂಟಿಕ್ವರಿ’ಯಲ್ಲಿ ಪ್ರಕಟಗೊಳಿಸಿದರು. ಅಷ್ಟೇ ಅಲ್ಲ ವಚನಗಳ ಗಾಯನಕ್ಕೂ ವ್ಯವಸ್ಥೆ ಮಾಡಿಸಿದರಲ್ಲದೆ ಶ್ರೇಷ್ಠ ಸಂಗೀತಕಾರರನ್ನು ವಚನ ಗಾಯನ ರೆಕಾರ್ಡಿಂಗ್ ಗಾಗಿ ಮುಂಬಯಿಯವರೆಗೆ ಕಳುಹಿಸಿದರು. ಹೀಗೆ ವಚನ ಸಾಹಿತ್ಯದ ಪ್ರಸಾರ ಕಾರ್ಯವನ್ನು ಅವರು ಬಹುಮುಖಿಯಾಗಿ ಕೈಗೊಂಡರು ಎಂದು ನಾಡೋಜ ಡಾ.ಮಹೇಶ ಜೋಶಿಯವರು ಗುರುತಿಸಿದರು.
ಮುಂಬಯಿನಲ್ಲಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಜನರಲ್ಲಿದ್ದ ಗುಜರಾತಿ ಮತ್ತು ಮರಾಠಿ ಭಾಷಾಭಿಮಾನ, ಕನ್ನಡದವರಲ್ಲಿ ತಮ್ಮ ಭಾಷೆಯ ಬಗ್ಗೆ ಇದ್ದ ನಿರಭಿಮಾನ ಇವರ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರಿತು. ಕನ್ನಡ ನಾಡು, ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಗಾಗಿ ದುಡಿಯಲು ವಿದ್ಯಾರ್ಥಿ ದಿಸೆಯಲ್ಲೇ ದೃಢಸಂಕಲ್ಪ ಮಾಡಿದರು. ಕರ್ನಾಟಕ ಏಕೀಕರಣಕ್ಕಾಗಿ ಆಗಲೇ ಹೋರಾಟದಲ್ಲಿ ನಿರತರಾಗಿದ್ದ ಆಲೂರು ಇವರಿಗಾಗ ಸ್ಫೂರ್ತಿಯಾಗಿದ್ದರು
ದೂರದೃಷ್ಟಿಯ ಹಳಕಟ್ಟಿಯವರು ಸಾಹಿತ್ಯ ಮತ್ತು ಪತ್ರಿಕೋದ್ಯಮದ ಜೊತೆ ಜೊತೆಗೆ ಸಂಘಟನೆ, ಬ್ಯಾಂಕಿಂಗ್, ಕೃಷಿ, ನೇಕಾರಿಕೆ, ಸಹಕಾರಿ ಹೀಗೆ ಎಲ್ಲದರಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. 1920ರಲ್ಲಿ ಮುಂಬಯಿಯ ವಿಧಾನ ಪರಿಷತ್ತಿನ ಸದಸ್ಯತ್ವ, 1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, 1928ರಲ್ಲಿ ಜರುಗಿದ 3ನೇ ಕರ್ನಾಟಕ ಏಕೀಕರಣ ಪರಿಷತ್ತಿನ ಅಧ್ಯಕ್ಷತೆ ಹೀಗೆ ಹಲವು ಗೌರವಗಳಿಗೆ ಅವರು ಪಾತ್ರರಾಗಿದ್ದರು ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ.ಎನ್.ಎಸ್.ಶ್ರೀಧರ ಮೂರ್ತಿಯವರು ಮಾತನಾಡಿ ಹಳಕಟ್ಟಿಯವರು ಸಂಪಾದಿಸಿ ಪ್ರಕಟಿಸಿದ “ವಚನ ಸಾಹಿತ್ಯ ಸಾರ”ವಂತೂ ಒಂದು ಅದ್ಭುತ ಕೃತಿ. ಈ ಬೃಹತ್ ಗ್ರಂಥ ಹಲವು ಸಂಪುಟಗಳಲ್ಲಿ 1923 ರಿಂದ 1939ರ ಅವಧಿಯಲ್ಲಿ ಪ್ರಕಟಗೊಂಡು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ. ಇವರ ಸ್ವತಂತ್ರ ಕೃತಿಗಳು ಸೇರಿದಂತೆ ಸಂಪಾದಿಸಿದ ವಚನಸಾಹಿತ್ಯ ಕೃತಿಗಳು 175ಕ್ಕೂ ಹೆಚ್ಚೆಂದರೆ ಹಳಕಟ್ಟಿಯವರ ವಚನ ಸಾಹಿತ್ಯದ ದೈತ್ಯಶಕ್ತಿಯನ್ನು ಯಾರು ಬೇಕಾದರೂ ಊಹಿಸಬಹುದು. ಪತ್ರಿಕೋದ್ಯಮದಲ್ಲೂ ಬಹಳ ಆಸಕ್ತಿ ಹೊಂದಿದ್ದ ಹಳಕಟ್ಟಿಯವರು 1926ರಲ್ಲಿ ಸಂಶೋಧನೆಗಾಗಿ ಮೀಸಲಾದ ‘ಶಿವಾನುಭವ’ ಪತ್ರಿಕೆ ಪ್ರಾರಂಭಿಸಿದರು, ಹಾಗೆಯೇ 1927ರಲ್ಲಿ ‘ನವ ಕರ್ನಾಟಕ’ ಎಂಬ ವಾರಪತ್ರಿಕೆಯನ್ನೂ ಸಹ ಆರಂಭಿಸಿದ್ದರು ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜ ತಮ್ಮ ಸ್ವಂತ ಮನೆಯನ್ನೇ ಮಾರಿ ಮುದ್ರಣಾಲಯವನ್ನು ಸ್ಥಾಪಿಸಿದ್ದ ಹಳಕಟ್ಟಿಯವರ ಆರೋಗ್ಯ ಸತತ ಸಂಶೋಧನೆಗಳಿಂದ ಹದಗೆಟ್ಟಿತ್ತು ಆದರೂ ಅವರು ತಮ್ಮ ಶೋಧನೆಯನ್ನು ಬಿಡಲಿಲ್ಲ, ಇವರು ಸಂಸ್ಥಾಪಿಸಿದ ಬಿ.ಎಲ್.ಡಿ.ಇ. ಸಂಸ್ಥೆ ಹಲವು ವರ್ಷಗಳ ಹಿಂದೆ ಮೂವತ್ತು ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಹಳಕಟ್ಟಿಯವರ ಸಮಗ್ರ ಸಾಹಿತ್ಯವನ್ನು ಹದಿನೈದು ಸಂಪುಟಗಳಲ್ಲಿ ಪ್ರಕಟಿಸಿದೆ ಎಂದರೆ ಯಾರಿಗಾದರೂ ಅರ್ಥವಾಗುತ್ತದೆ. ಹಳಕಟ್ಟಿಯವರು ಸಂಸ್ಥಾಪಿಸಿದ್ದ ಸಂಸ್ಥೆಯೊಂದರ ಬೆಳವಣಿಗೆಯ ಪರಿ ಎಂತಹದು ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಇನ್ನೊಬ್ಬ ಕಾರ್ಯದರ್ಶಿ ನೇ.ಭ.ರಾಮಲಿಂಗಶೆಟ್ಟರು ಹಳಕಟ್ಟಿಯವರ ಸರಳತೆಯನ್ನು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಟನಮನವನ್ನು ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಸೇರಿದಂತೆ ಪರಿಷತ್ತಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರತಿಕ್ರಿಯೆ