ಡಾ.ಪಿ.ಶ್ರೀಕೃಷ್ಣಭಟ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’

ಡಾ.ಪಿ.ಶ್ರೀಕೃಷ್ಣಭಟ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’

WhatsApp Image 2024-09-02 at 3.06.42 PM

ಬೆಂಗಳೂರು: 2024ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ’ ಪ್ರಶಸ್ತಿಗಾಗಿ ಕಾಸರಗೋಡಿನ ಹಿರಿಯ ಸಂಶೋಧಕ ಡಾ.ಪಿ.ಶ್ರೀಕೃಷ್ಣಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಮೇರು ವಿದ್ವಾಂಸರಾದ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳ ಬಂಧು-ಮಿತ್ರರು ಈ ದತ್ತಿಯನ್ನು ಸ್ಥಾಪಿಸಿದ್ದು ಹಳಗನ್ನಡ ಸಾಹಿತ್ಯ, ಛಂದಸ್ಸು, ನಿಘಂಟು ರಚನೆ, ಗ್ರಂಥ ಸಂಪಾದನೆ, ಅನುವಾದ, ಭಾಷಾಶಾಸ್ತ್ರ ಮೊದಲಾದ ಶಾಸ್ತ್ರ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.

ಕಾಸರಗೋಡಿನ ಪತ್ರೊಡಿ ಎಂಬ ಚಿಕ್ಕ ಗ್ರಾಮದಲ್ಲಿ ಜನಿಸಿದ ಡಾ.ಪಿ.ಶ್ರೀಕೃಷ್ಣಭಟ್ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿ ಮತ್ತು ಚಿನ್ನದ ಪದಕದೊಂದಿಗೆ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ‘ಕನ್ನಡ ವ್ಯಾಕರಣ ಪರಂಪರೆಯ ಮೇಲೆ ಸಂಸ್ಕೃತದ ಪ್ರಭಾವ’ಎನ್ನುವ ವಿಷಯದಲ್ಲಿ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದರು. ಸುರತ್ ಕಲ್ ನಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಮುಂದೆ ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಕನ್ನಡ ಪ್ರಾಧ್ಯಾ ಪಕ ಮತ್ತು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಮುಂದೆ ಕಣ್ಣೂರು ವಿಶ್ವವಿದ್ಯಾಲಯದ ಭಾರತೀಯ ಭಾಷಾ ಅಧ್ಯಯನಾಂಗದಲ್ಲಿಯೂ ಸೇವೆ ಸಲ್ಲಿಸಿದರು. ಗಡಿ ಭಾಗದ ಕಾಸರಗೋಡು ಸರ್ಕಾರಿ ಕಾಲೇಜು ಮತ್ತು ಕಲ್ಲಿ ಕೋಟೆ, ಕಣ್ಣೂರು ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸಂಶೋಧನೆ ಮತ್ತು ಅಧ್ಯಯನ ನಡೆಯುವಲ್ಲಿ ಅವರು ಬಹಳ ಮುಖ್ಯಪಾತ್ರವನ್ನು ವಹಿಸಿದ್ದಾರೆ. ಗಡಿ ಭಾಗದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅವರ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿದಾನಿಗಳ ಪರವಾಗಿ ಪ್ರೊ.ಎಲ್.ಎಸ್.ಶಿವಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಭಾಗವಹಿಸಿದ್ದರು.

ಪುರಸ್ಕೃತರಾದ ಡಾ.ಪಿ. ಶ್ರೀಕೃಷ್ಣಭಟ್ ಅವರನ್ನು ವಿಶೇಷವಾಗಿ ಅಭಿನಂದಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅವರ ಗಡಿ ಭಾಗದ ಕನ್ನಡ ಸೇವೆ ನಿರಂತರವಾಗಿ ಸಾಗಲಿ ಅದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)